ಬೆಳಗಾವಿ :ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದುಡ್ಡು, ಕುಕ್ಕರ್, ಗೃಹಬಳಕೆಯ ಪಾತ್ರೆಗಳು, ಸೀರೆ, ಉಚಿತ ಕೂಪನ್ ಸೇರಿದಂತೆ ಯಾವುದೇ ರೀತಿಯ ಉಡುಗೊರೆ ಹಂಚುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಈ ರೀತಿಯ ಚಟುವಟಿಕೆಗಳು ಕಂಡುಬಂದರೆ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆಯನ್ನು ನೀಡಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಕ್ಷಣವೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಭಾರತ ಚುನಾವಣಾ ಆಯೋಗ ನೀಡಿರುವ ಕೆಲವೊಂದು ನಿರ್ದೇಶನಗಳನ್ನು ಎಲ್ಲ ರಾಜಕೀಯ ಪಕ್ಷಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು. ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಆಮಿಷಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯುಕ್ತರು ಸೂಚಿಸಿದ್ದಾರೆ.ಆ ಪ್ರಕಾರ ಜಿಲ್ಲೆಯಾದ್ಯಂತ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ನೀಡುವಂತಿಲ್ಲ:ಚುನಾವಣೆಯ ಈ ಸಂದರ್ಭದಲ್ಲಿ ದುಡ್ಡು, ಕುಕ್ಕರ್, ಗೃಹಬಳಕೆಯ ಪಾತ್ರೆಗಳು, ಸೀರೆ ಸೇರಿದಂತೆ ಯಾವುದೇ ರೀತಿಯ ಉಡುಗೊರೆ ಹಂಚಿಕೆ ಮಾಡುವಂತಿಲ್ಲ. ಒಂದು ವೇಳೆ ಇಂತಹ ವಸ್ತುಗಳ ವಿತರಣೆ ಕಂಡುಬಂದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದರು.ಬಾಡೂಟ ನೀಡುವಂತಿಲ್ಲ; ನಾಟಕ ಪ್ರದರ್ಶನವನ್ನು ಏರ್ಪಡಿಸುವಂತಿಲ್ಲ. ಯಾವುದೇ ರೀತಿಯ ಕೂಪನ್, ಉಚಿತ ಟಿಕೆಟ್, ಉಚಿತ ಪೆಟ್ರೋಲ್ ಕೂಪನ್ ನೀಡುವುದು ಮತದಾರರಿಗೆ ಆಮಿಷ ಒಡ್ಡಿದಂತಾಗುತ್ತದೆ. ಆದ್ದರಿಂದ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಇವುಗಳಿಗೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟವಾಗಿ ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹರ್ಷಲ್ ಭೋಯ ಅವರು ಮಾತನಾಡಿ, ಅಕ್ರಮವಾಗಿ ಹಣ, ಮದ್ಯ ಸಾಗಾಣಿಕೆ ತಡೆಗೆ ಸಂಬಂಧಿಸಿದಂತೆ ಈಗಾಗಲೇ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿವೆ ಎಂದರು.
ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಮಾಡಿಕೊಂಡರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಭಾನು, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ ಸೇರಿದಂತೆ ಜಿಲ್ಲೆಯ ಎಲ್ಲ ಮತಕ್ಷೇತ್ರಗಳ ಚುನಾವಣಾಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.